ಕೆ.ಎನ್.ಪಿ.ವಾರ್ತೆ,ಮುಂಬೈ,ನ.26;

ಎರಡನೇ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ದೇವೇಂದ್ರ ಫಡ್ನವಿಸ್ ಬಹುಮತ ಇಲ್ಲದ ಕಾರಣ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದರು.

ದೇವೇಂದ್ರ ಫಡ್ನವೀಸ್‌ ಅವರು ಮಂಗಳವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ನೀಡಿದರು. ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರ್‌ ಅವರು ಫಡ್ನವೀಸ್‌ ರಾಜೀನಾಮೆಯನ್ನು ಸ್ವೀಕರಿಸಿದರು.

ನ.26 ರಂದು ಮಧ್ಯಾಹ್ನ 3:30 ಕ್ಕೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಸ್ಪಷ್ಟಪಡಿಸಿದ ನಂತರ ರಾಜಭವನಕ್ಕೆ ತೆರಳಿದ ಫಡ್ನವಿಸ್‌ ರಾಜೀನಾಮೆ ನೀಡಿದರು.

ಮಂಗಳವಾರ ಸಂಜೆ ಶಿವಸೇನೆ- ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿ ಕೂಟ ಪತ್ರಿಕಾಗೋಷ್ಠಿ ನಡೆಸಲಿದೆ. ಇದರಲ್ಲಿ ಜಂಟಿ ಶಾಸಕಾಂಗ ಪಕ್ಷದ ನಾಯಕ ಯಾರೆಂಬುದು ಅನಾವರಣಗೊಳ್ಳಲಿದೆ. ಉದ್ಧವ್‌ ಠಾಕ್ರೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಎಲ್ಲ ಸಾಧ್ಯತೆಗಳೂ ಇವೆ.

ನವೆಂಬರ್ 23 ಶನಿವಾರ ಬೆಳ್ಳಂಬೆಳಗ್ಗೆ ಮಹಾರಾಷ್ಟ್ರ ರಾಜಭವನದಲ್ಲಿ ದೇವೇಂದ್ರ ಫಡ್ನವೀಸ್ ಹಾಗೂ ಅಜಿತ್ ಪವಾರ್ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಆದರೆ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಎನ್ ಸಿಪಿಯ ಅಜಿತ್ ಪವಾರ್ ಬಣದ ಶಾಸಕರು ಕೊನೆ ಕ್ಷಣದಲ್ಲಿ ಬಿಜೆಪಿಗೆ ಕೈಕೊಟ್ಟು ಪುನಃ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಹೇಳಿದ್ದರು.

ಇತ್ತ ಬಿಜೆಪಿ ಸರ್ಕಾರ ರಚಿಸಿರುವುದನ್ನು ಪ್ರಶ್ನಿಸಿ ಎನ್ ಸಿಪಿ-ಶಿವಸೇನೆ-ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ನ.27 ರಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕೆಂದು ಆದೇಶ ನೀಡಿತ್ತು.

ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಡಿಸಿಎಂ ಅಜಿತ್ ಪವಾರ್ ರಾಜೀನಾಮೆ ನೀಡಿದ್ದರು. ಡಿಸಿಎಂ ರಾಜೀನಾಮೆ ನೀಡುತ್ತಿದ್ದಂತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ತನ್ನ ಸರ್ಕಾರ ಉಳಿಸಿಕೊಳ್ಳುವುದಕ್ಕೆ ಅಗತ್ಯ ಶಾಸಕರ ಬೆಂಬಲ ಇಲ್ಲ ಎಂಬುದು ಖಾತ್ರಿಯಾಗಿ, ಸಿಎಂ ದೇವೇಂದ್ರ ಫಡ್ನವಿಸ್ ಸಹ ರಾಜೀನಾಮೆ ನೀಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.