ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.13;

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಕಾರ್ಯಕರ್ತ ಪರಶುರಾಮ ಅಶೋಕ ವಾಘ್ಮೋರೆ (26) ಎಂಬಾತನನ್ನು ಎಸ್‌ಐಟಿ ಅಧಿಕಾರಿಗಳು ನಿನ್ನೆ ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆ ಸಿಂದಗಿ ನಿವಾಸಿಯಾಗಿರುವ ಆರೋಪಿ ಪರಶುರಾಮ, 2011ರಲ್ಲಿ ಸಿಂದಗಿ ತಹಸೀಲ್ದಾರ್‌ ಕಚೇರಿ ಎದುರು ಪಾಕ್‌ ಧ್ವಜ ಹಾರಿಸಿದ್ದ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. ಈತನನ್ನು ಎಸ್‌ಐಟಿ ಅಧಿಕಾರಿಗಳು 3ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಿನ್ನೆ ಹಾಜರುಪಡಿಸಿದ್ದು, ಜೂನ್ 24ರವರೆಗೆ ಆತನನ್ನು ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

ಹತ್ಯೆ ಪ್ರಕರಣದಲ್ಲಿ ಮದ್ದೂರಿನ ಕೆಟಿ ನವೀನ್ ಕುಮಾರ್, ಶಿಕಾರಿಪುರದ ಕಪ್ಪನಹಳ್ಳಿ ಗ್ರಾಮದ ಸುಜಿತ್ ಕುಮಾರ್ (37), ಮಹಾರಾಷ್ಟ್ರದ ಅಮೋಲ್ ಕಾಳೆ, ಅಮಿತ್ ದೇಗ್ವೇಕರ್ (38) ಹಾಗೂ ವಿಜಯಪುರ ಜಿಲ್ಲೆ ರತ್ನಾಪುರ ಗ್ರಾಮದ ಮನೋಹರ್ ದುಂಡಪ್ಪ ಯಡವೆ (29) ಎಂಬಾತನನ್ನು ಈಗಾಗಲೇ ಎಸ್ಐಟಿ ತಂಡ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ. ಆರೋಪಿಗಳು ನೀಡಿದ ಮಾಹಿತಿಯಂತೆ ಪರಶುರಾಮ್‌ನನ್ನು ಬಂಧಿಸಲಾಗಿದೆ ಎಂದು ಎಸ್‌ಐಟಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮೊದಲಿಗೆ ಬಂಧಿಸಲಾಗಿದ್ದ ಮದ್ದೂರಿನ ಕೆ.ಟಿ.ನವೀನ್‌ಕುಮಾರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಉಳಿದ ಐವರನ್ನು ನ್ಯಾಯಾಲಯದ ಅನುಮತಿ ಮೇರೆಗೆ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

9513326661

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.