ಕೆ.ಎನ್.ಪಿ.ವಾರ್ತೆ,ನವದೆಹಲಿ,ಏ.15;
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿನ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಇಂದು ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಹಾಜರಿರಲಿದ್ದಾರೆ.
ಬೇರೆ ಪಕ್ಷಗಳಿಂದ ವಲಸೆ ಬಂದಿರುವವರು ಹಾಗೂ ಸೋಲಿನ ಸುಳಿಯಲ್ಲಿರುವ ಹಾಲಿ ಶಾಸಕರಿಗೆ ಟಿಕೆಟ್ ಹಂಚಿಕೆ ಮಾಡುವ ಕುರಿತು ಈ ದಿನವೂ ಕಸರತ್ತು ಮುಂದುವರೆದಿದ್ದು, ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ ಬಳಿಕ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಈಗಾಗಲೇ ಶುಕ್ರವಾರದಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಸೋನಿಯಾ ಗಾಂಧಿ ಅವರ ನಿವಾಸದಲ್ಲಿ 2 ಸುತ್ತಿನ ಸಭೆ ನಡೆಸಿದ್ದು, ನಿನ್ನೆಯೂ ಸಹ ಪಕ್ಷದ ಕಛೇರಿಯಲ್ಲಿ ಟಿಕೆಟ್ ಹಂಚಿಕೆ ಮಾಡುವ ಕುರಿತೂ ಸಾಕಷ್ಟು ಚರ್ಚೆ ನಡೆಸಲಾಯಿತು. ಆದರೆ ಚರ್ಚೆ ಅಪೂರ್ಣಗೊಂಡ ಕಾರಣ ಇಂದು ಚರ್ಚೆಯನ್ನು ಮುಂದುವರಿಸಲು ನಿರ್ಧರಿಸಲಾಯಿತು ಎನ್ನಲಾಗಿದೆ. ಚರ್ಚೆ ಪೂರ್ಣಗೊಂಡ ಬಳಿಕ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.