ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.10;

ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. 

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ.

ಗಿರೀಶರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಆಯಿತು.

ಆ ಬಳಿಕ ರ್ಹೊಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದಾರೆ.

ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ವಿದ್ವಾಂಸರ ಸಖ್ಯದಲ್ಲಿ, ಕಲಾಸೇವಕರ ಸಹವಾಸದಲ್ಲಿ ಗುರ್ತಿಸಿಕೊಂಡ ಕಾರ್ನಾಡ್ ಬುದ್ಧಿಜೀವಿ ಎನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು.

ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು. ಇವರು ಕನ್ನಡವಲ್ಲದೆ ಹಿಂದಿ, ಪಂಜಾಬಿ, ಮರಾಠಿ ಹಾಗೂ ಭಾರತೀಯ ಹಲವು ಭಾಷೆಗಳಿಗೆ ತಮ್ಮ ನಾಟಕಗಳು ಅನುವಾದಗೊಂಡು, ಪ್ರದರ್ಶನಗೊಂಡವು.

ಆಕ್ಸ್‌ಫರ್ಡ್‌ನಿಂದ ಬಂದ ನಂತರ ಮದ್ರಾಸ್‌ನಲ್ಲಿ ಆಕ್ಸ್ ಫ಼ರ್ಡ್ ಯೂನಿವರ್ಸಿಟಿ ಪ್ರೆಸ್ ನಲ್ಲಿ ಸಂಪಾದಕರಾಗಿ ನೌಕರಿಯಲ್ಲಿದ್ದು, ಅದನ್ನು ತೊರೆದು ಧಾರವಾಡಕ್ಕೆ ವಾಪಾಸಾಗಿ ನಾಟಕ ಕ್ಷೇತ್ರದಲ್ಲಿ ಕೃಷಿ ನಡೆಸಿದರು.

ಇಂಗ್ಲೆಂಡಿಗೆ ತೆರಳುವ ಮೊದಲೆ ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ ಯಯಾತಿ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು.

ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‍ನ ನಿರ್ದೇಶಕರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬಯಿಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ಅಲ್ಲಿಂದ ರಚಿತವಾದ ಅವರ ನಾಟಕಗಳು-ಅಂಜುಮಲ್ಲಿಗೆ, ನಾಗಮಂಡಲ, ತಲೆದಂಡ ಹಾಗೂ ಅಗ್ನಿ ಮತ್ತು ಮಳೆ.

ಕಾರ್ನಾಡರಿಗೆ ಹಲವಾರು ಹುದ್ದೆಗಳು, ಪ್ರಶಸ್ತಿಗಳು ಲಭಿಸಿವೆ :

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,
ಗುಬ್ಬಿ ವೀರಣ್ಣ ಪ್ರಶಸ್ತಿ,
ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ,
ಪದ್ಮಶ್ರೀ -೧೯೭೪
ಪದ್ಮಭೂಷಣ -೧೯೯೨
ಜ್ಞಾನಪೀಠ -೧೯೯೮
ಕಾಳಿದಾಸ ಸಮ್ಮಾನ್ – ೧೯೯೮
ಪ್ರಶಸ್ತಿಗಳ ಗೌರವ ದೊರೆಕಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.