ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.01;
ಪ್ರಧಾನಿ ಮೋದಿ ಇಂದಿನಿಂದ ಮೇ.08ರವರೆಗೆ ರಾಜ್ಯಪ್ರವಾಸ ಮಾಡಲಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ನಾನಾ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರ ರಂಗೇರುತ್ತಿದ್ದು, ಇದರ ಬೆನ್ನಲ್ಲೆ, ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ರಾಜ್ಯಪ್ರವಾಸ ಕೈಗೊಂಡಿದ್ದಾರೆ. ಮೋದಿ ಇಂದಿನಿಂದ ಮೇ.08 ರವರೆಗೆ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದಿನಿಂದ ಮೇ.08 ರವರೆಗೆ ರಾಜ್ಯ ಪ್ರವಾಸ ಮಾಡಲಿರುವ ಮೋದಿ ಮೇ.03, ಮೇ.05, ಮೇ.07, ಮೇ.08ರಂದು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದು, ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ನರೇಂದ್ರ ಮೋದಿ ಇಂದು ಚಾಮರಾಜನಗರಕ್ಕೆ ಆಗಮಿಸಲಿದ್ದು, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲಾ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯಲಿರುವ ಉಡುಪಿ, ಭಟ್ಕಳ, ಕುಮಟಾ, ಕಾರವಾರ ಕ್ಷೇತ್ರಗಳ ವ್ಯಾಪ್ತಿಯ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಸಂಜೆ ಚಿಕ್ಕೋಡಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ.
ಸಮಾವೇಶ ನಡೆಯುವ ಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಎಎಸ್‌ಸಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಭದ್ರತೆ ಪರಿಶೀಲನೆ ಮಾಡಲಾಗುತ್ತಿದೆ. ಸಮಾವೇಶದಲ್ಲಿ ಭಾಗವಹಿಸುವ ಪ್ರತಿಯೊಬ್ಬರನ್ನೂ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ಮೇ.03ರಂದು ಬೆಳಿಗ್ಗೆ ಕಲಬುರಗಿಗೆ ಆಗಮಿಸಲಿರುವ ಮೋದಿ, ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ ಬಳ್ಳಾರಿ, ಕೊಪ್ಪಳ ವ್ಯಾಪ್ತಿಯ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೇ.05ರಂದು ಬೆಳಿಗ್ಗೆ ತುಮಕೂರಿಗೆ ಆಗಮಿಸಲಿರುವ ಮೋದಿ, ತುಮಕೂರು, ನೆಲಮಂಗಲ, ಹಾಸನ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಮಧ್ಯಾಹ್ನ ಶಿವಮೊಗ್ಗ, ಚಿಕ್ಕಮಗಳೂರು, ಶಿರಾ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಗದಗ, ಧಾರವಾಡ, ಹಾವೇರಿ ಜಿಲ್ಲಾ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮೇ.07ರಂದು ಬೆಳಿಗ್ಗೆ ರಾಯಚೂರಿಗೆ ಆಗಮಿಸಲಿರುವ ಮೋದಿ, ರಾಯಚೂರಿನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಮಧ್ಯಾಹ್ನ ಚಿತ್ರದುರ್ಗದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಕೋಲಾರದಲ್ಲಿ ನಡೆಯುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ವ್ಯಾಪ್ತಿಯ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೇ.08ರಂದು ಬೆಳಿಗ್ಗೆ ವಿಜಯಪುರಕ್ಕೆ ಆಗಮಿಸಲಿರುವ ಮೋದಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಮಧ್ಯಾಹ್ನ ಮಂಗಳೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊ|ಳ್ಳಲಿದ್ದಾರೆ. ಸಂಜೆ ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.