ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಏ.03;
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಈಗಾಗಲೇ ಹಲವೆಡೆ ರಾಜ್ಯ ಪ್ರವಾಸ ಕೈಗೊಂಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಚುನಾವಣಾ ಪ್ರಚಾರಕ್ಕಾಗಿ ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಿಗೆ ಆಗಮಿಸುತ್ತಿದ್ದಾರೆ.
ಇಂದು ದಾವಣಗೆರೆ ಸೇರಿ ಜಿಲ್ಲೆಯ 3 ಕಡೆ ಪ್ರಚಾರ ಸಭೆ ನಡೆಸಲಿದ್ದಾರೆ. ಇಂದು ರಾತ್ರಿ ದಾವಣಗೆರೆಯಲ್ಲಿಯೇ ವಾಸ್ತವ್ಯ ಹೂಡಲಿದ್ದು, ನಾಳೆ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.
ಇಂದು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸುವ ರಾಹುಲ್ ಗಾಂಧಿ, ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಶಿವಮೊಗ್ಗಕ್ಕೆ ಆಗಮಿಸುವ ರಾಹುಲ್ ಗಾಂಧಿ, ಅಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.
ನಂತರ ಶಿವಮೊಗ್ಗ ನಗರದ ಮುಖ್ಯ ಬಸ್ ನಿಲ್ದಾಣದಿಂದ ಗೋಪಿ ವೃತ್ತದವರೆಗೆ ರೋಡ್ ಶೋ ನಡೆಸಲಿರುವ ಅವರು ಕೊನೆಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಮಧ್ಯಾಹ್ನ 3ಕ್ಕೆ ಹೊನ್ನಾಳಿ, ಹರಿಹರ ಮೂಲಕ ದಾವಣಗೆರೆಗೆ ತೆರಳಿ, ಸಂಜೆ 5.45ಕ್ಕೆ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ನಾಳೆ ಬೆಳಿಗ್ಗೆ ದಾವಣಗೆರೆ ಜಿಲ್ಲೆ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಜತೆ ಸಭೆ ನಡೆಸಲಿರುವ ರಾಹುಲ್ ಗಾಂಧಿ, ಇದೇ ಸಂದರ್ಭದಲ್ಲಿ ಅಸಂಘಟಿತ ಕಾರ್ಮಿಕರು ಮತ್ತು ವ್ಯಾಪಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಇಲ್ಲಿಂದ ನೆರವಾಗಿ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಗೆ ಹೆಲಿಕಾಪ್ಟರ್ ಮೂಲಕ ತೆರಳಿ, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.40ಕ್ಕೆ ಅಲ್ಲಿಂದ ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ, ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ, ಶಿವಕುಮಾರ ಸ್ವಾಮೀಜಿ ವೃತ್ತದಿಂದ ಬಿಜಿ ಪಾಳ್ಯದವರೆಗೆ ರೋಡ್ ಶೋ ನಡೆಸಲಿದ್ದಾರೆ. ಸಂಜೆ ಹೊತ್ತಿಗೆ ಕುಣಿಗಲ್ ಮತ್ತು ಮಾಗಡಿಯಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಆ ಬಳಿಕ ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಲಿದ್ದಾರೆ.
ಜಿಲ್ಲೆಗೆ ಆಗಮಿಸುತ್ತಿರುವ ಪಕ್ಷದ ವರಿಷ್ಠರನ್ನು ಸ್ವಾಗತಿಸಲು ಜಿಲ್ಲಾ ಕಾಂಗ್ರೆಸ್ ಕೂಡ ಸಜ್ಜುಗೊಂಡಿದೆ. 2 ದಿನದ ಪ್ರವಾಸದಲ್ಲಿ ರಾಹುಲ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಲಿದ್ದಾರೆ. ಇವರೊಂದಿಗೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್, ಪ್ರಚಾರ ಸಮಿತಿ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯ ನಾಯಕರು ಸಾಥ್ ನೀಡಲಿದ್ದಾರೆ.
ವರದಿ : ಮಹಮ್ಮದ್ ಅಬ್ದುಲ್ ರಖೀಬ್